ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ರಾಮನಗರ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ವತಿಯಿಂದ ರೈತರಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಳೆಗಳ ಉತ್ತಮ ಬೆಳವಣಿಗೆ, ಅಧಿಕ ಇಳುವರಿ ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವವನ್ನು ವಿವರಿಸಲಾಯಿತು. ಬೆಳೆಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಸಮತೋಲಿತವಾಗಿ ಒದಗಿಸಲು ಸಾವಯವ ಗೊಬ್ಬರಗಳು, ಜೈವಿಕ ಗೊಬ್ಬರಗಳು ಹಾಗೂ ರಾಸಾಯನಿಕ ಗೊಬ್ಬರಗಳನ್ನು ಮಣ್ಣಿನ ಗುಣಲಕ್ಷಣ ಮತ್ತು ಬೆಳೆಗಳ ಅವಶ್ಯಕತೆಗೆ ಅನುಗುಣವಾಗಿ ಸಮರ್ಪಕವಾಗಿ ಬಳಸುವ ವಿಧಾನಗಳ ಕುರಿತು ರೈತರಿಗೆ ತಿಳಿಸಲಾಯಿತು.
ಕೊಟ್ಟಿಗೆ ಗೊಬ್ಬರ, ಕಾಂಪೋಸ್ಟ್, ಎರೆಹುಳು ಗೊಬ್ಬರ, ಹಸಿರೆಲೆ ಗೊಬ್ಬರ ಹಾಗೂ ಜೈವಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಆರೋಗ್ಯ ಸುಧಾರಿಸುವುದರ ಜೊತೆಗೆ ಮಣ್ಣಿನಲ್ಲಿನ ಸೂಕ್ಷ್ಮಜೀವಿಗಳ ಚಟುವಟಿಕೆ ಹೆಚ್ಚುತ್ತದೆ ಎಂದು ತಿಳಿಸಲಾಯಿತು. ಮಣ್ಣಿನ ಪರೀಕ್ಷೆ ಮಾಡಿಸಿ, ಅದರ ಫಲಿತಾಂಶದ ಆಧಾರದ ಮೇಲೆ ಸೂಕ್ತ ಪ್ರಮಾಣದಲ್ಲಿ ಗೊಬ್ಬರಗಳನ್ನು ಬಳಸುವುದರಿಂದ ಅನಗತ್ಯ ಗೊಬ್ಬರ ವೆಚ್ಚವನ್ನು ಕಡಿಮೆ ಮಾಡಿ, ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಬಹುದು ಎಂಬುದರ ಕುರಿತು ಅರಿವು ಮೂಡಿಸಲಾಯಿತು.
ಅಲ್ಲದೆ, ಮಣ್ಣಿನ ಫಲವತ್ತತೆಯನ್ನು ದೀರ್ಘಕಾಲ ಕಾಪಾಡಿಕೊಳ್ಳಲು ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಮಗ್ರ ಪೋಷಕಾಂಶ ನಿರ್ವಹಣೆ ಸಹಕಾರಿಯಾಗಿದೆ ಎಂದು ವಿದ್ಯಾರ್ಥಿಗಳು ರೈತರಿಗೆ ವಿವರಿಸಿದರು. ಈ ಕಾರ್ಯಕ್ರಮವು ರೈತರಲ್ಲಿ ಮಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸಲು ಪ್ರೇರಣೆ ನೀಡಿತು.










