ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಇಲ್ಲಿನ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮದಡಿ ಶಿವಮೊಗ್ಗ ತಾಲ್ಲೂಕಿನ ಕುಂಸಿ ಹೋಬಳಿಯ ಚಿಕ್ಕಮರಸ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪದ್ಮಾ ಅವರು ಮಾತನಾಡಿ “ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರ ಮಾಲಿನ್ಯ ದೊಡ್ಡ ಸವಾಲಾಗಿದೆ. ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಮರಗಳನ್ನು ಬೆಳೆಸುವುದರಿಂದ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಮತ್ತು ಉತ್ತಮ ಪರಿಸರವನ್ನು ನೀಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಶಾಲೆಗೆ ಅನುಕೂಲವಾಗುವಂತೆ ನುಗ್ಗೆ, ಕರಿಬೇವು, ಮಾವು , ಡ್ರ್ಯಾಗನ್ ಸೇರಿದಂತೆ ಇತರ ಗಿಡಗಳನ್ನು ನೆಟ್ಟು ನೀರು ಎರೆಯುವ ಮೂಲಕ ಗ್ರಾಮಸ್ಥರಿಗೆ ಮತ್ತು ಮಕ್ಕಳಿಗೆ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ 20 ಕ್ಕೂ ಹೆಚ್ಚು ರೈತರು, ಶಾಲಾ ವಿದ್ಯಾರ್ಥಿಗಳು, ಯುವಕರು ಹಾಗೂ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಾಜರಿದ್ದರು.















